Home> India
Advertisement

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಬಿಎಸ್‍ಪಿಗೆ ಸೇರ್ಪಡೆ

ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಎಸ್‍ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮುಖದಲ್ಲಿ ಡ್ಯಾನಿಶ್ ಅಲಿ ಅವರು ಬಹುಜನ ಸಮಾಜ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಬಿಎಸ್‍ಪಿಗೆ ಸೇರ್ಪಡೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಪ್ರಕಟವಾದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಆಪ್ತ ಹಾಗೂ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಶನಿವಾರ ಬಿಎಸ್ಪಿ ಸೇರ್ಪಡೆಯಾಗಿದ್ದಾರೆ. 

ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಉತ್ತರ ಪ್ರದೇಶದ ಲಕ್ನೋದಲ್ಲಿ ಬಿಎಸ್‍ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮುಖದಲ್ಲಿ ಡ್ಯಾನಿಶ್ ಅಲಿ ಅವರು ಬಹುಜನ ಸಮಾಜ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದೆ. 

"ಉತ್ತರಪ್ರದೇಶದಲ್ಲಿ ಜೆಡಿಎಸ್ ದೊಡ್ಡ ಸಾಂಸ್ಥಿಕ ರಚನೆ ಹೊಂದಿಲ್ಲ. ನನ್ನ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ನನ್ನ ಜನ್ಮಭೂಮಿಯಲ್ಲಿ, ಕರ್ಮಭೂಮಿಯಲ್ಲಿ ಜೆಡಿಎಸ್ ಪಕ್ಷವನ್ನು ಬೆಳೆಸಲು ಸಾಧ್ಯವಾಗಲಿಲ್ಲ. ಇಂದಿನ ಪರಿಸ್ಥಿತಿಯಲ್ಲಿ ನಮ್ಮ ಶಕ್ತಿಯನ್ನು ಬಲವಾದ ನಾಯಕತ್ವದಲ್ಲಿ ಬಳಸುವ ಅಗತ್ಯವಿದೆ" ಎಂದು ಡ್ಯಾನಿಶ್ ಅಲಿ ಎಎನ್ಐ ಗೆ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವರ ಆಶೀರ್ವಾದ ಹಾಗೂ ಅನುಮತಿ ಪಡೆದೇ ಬಿಎಸ್ಪಿಗೆ ಸೇರ್ಪಡೆಯಾಗಿರುವುದಾಗಿ ಡ್ಯಾನಿಶ್ ಅಲಿ ಹೇಳಿದ್ದಾರೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖಪಾತ್ರ ವಹಿಸಿದ್ದ ಡ್ಯಾನಿಶ್ ಅಲಿ, ರಾಷ್ಟ್ರೀಯ ಮಟ್ಟದಲ್ಲಿ ಜೆಡಿಎಸ್ ಪಕ್ಷಕ್ಕಾಗಿ ದುಡಿದಿದ್ದರು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಿಂದ ಸ್ಪರ್ಧಿಸುವ ಇಚ್ಛೆ ಹೊಂದಿರುವ ಕಾರಣ ಜೆಡಿಎಸ್ ತೊರೆದು ಬಿಎಸ್ಪಿ ಸೇರಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. 

Read More